ಯಲ್ಲಾಪುರ/ಕಾರವಾರ : ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ರವಿವಾರ ಕಾರವಾರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಶಾಲು ಹೊದಿಸಿ ಸ್ವಾಗತಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿರೂರು ಗ್ರಾಮಕ್ಕೆ ಭೇಟಿ ನೀಡಿ, ಪ್ರವಾಹದಿಂದ ಹಾನಿಗೊಳಗಾದ ಮನೆಗಳು, ಬೆಳೆಗಳು ಮತ್ತು ಸಾರ್ವಜನಿಕ ಸ್ವತ್ತುಗಳನ್ನು ಪರಿಶೀಲಿಸಿದರು. ಬಾಧಿತ ಜನರಿಂದ ಅವರ ಕಷ್ಟಗಳನ್ನು ಆಲಿಸಿದರು ಮತ್ತು ಸರ್ಕಾರದಿಂದ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಭೇಟಿಯಾದ ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿ, ಪ್ರಕೃತಿ ವಿಕೋಪದಿಂದ ಜನರು ತುಂಬಾ ದುಃಖಿತರಾಗಿದ್ದಾರೆ ಮತ್ತು ಸರ್ಕಾರದಿಂದ ತ್ವರಿತ ಸಹಾಯದ ಅಗತ್ಯವಿದೆ ಎಂದು ಮುಖ್ಯಮಂತ್ರಿಗೆ ತಿಳಿಸಿದರು.