ಯಲ್ಲಾಪುರ : ಭಾರತ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಯಲ್ಲಾಪುರ ಇವರ ಆಶ್ರಯದಲ್ಲಿ ತಾಲೂಕ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧಾ ಕಾರ್ಯಕ್ರಮ ಮಂಗಳವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಸಭಾಭವನದಲ್ಲಿ ನಡೆಯಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ನರ್ಮದಾ ನಾಯ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಯುವ ಜನಾಂಗದಲ್ಲಿ ಶಿಸ್ತು, ದೇಶಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಘಟಕಗಳನ್ನು ಪ್ರಾರಂಭಿಸಬೇಕು ಎಂದು ಅವರು ಸಲಹೆ ನೀಡಿದರು.
ವಿಕೇಂದ್ರೀಕರಣ ಮತ್ತು ರಾಜ್ಯ ಯೋಜನಾ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಮುಖ್ಯ ಅತಿಥಿಯಾಗಿ ಮಾತನಾಡಿ, ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ಸಂಸ್ಕಾರಗಳನ್ನು ಕಲಿಸುವುದರ ಜೊತೆಗೆ ಉತ್ತಮ ಸಂಸ್ಕಾರ ಮತ್ತು ದೇಶ ಪ್ರೇಮ ಗುಣಗಳನ್ನು ಸ್ಕೌಟ್ಸ್ ಗೈಡ್ಸ್ ಬೆಳೆಸುವುದರಿಂದ ಮಕ್ಕಳು ಸಕ್ರಿಯರಾಗಿದ್ದಾರೆ ಎಂದು ಹೇಳಿದರು.
ಪೊಲೀಸ್ ನಿರೀಕ್ಷಕ ರಮೇಶ್ ಹಾನಾಪುರ ಮಾತನಾಡಿ, ಸ್ಕೌಟ್ಸ್- ಗೈಡ್ಸ್ ಮೂಲಕ ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ, ಶಾಂತಿ, ಸಹನೆ, ಘನತೆ, ಗೌರವ ಮತ್ತು ದೇಶಾಭಿಮಾನದ ಗುಣಗಳನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹೇಳಿದರು. ಸಮಾಜದ ಅಭಿವೃದ್ಧಿಯಲ್ಲಿ ನಿಮ್ಮ ಪಾತ್ರವೂ ಇರಲಿ ಎಂದು ಅವರು ಉತ್ತೇಜಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ ಮಾತನಾಡಿ, ಸ್ಕೌಟ್ಸ್ ಗೈಡ್ಸ್ ತನ್ನ ಚಟುವಟಿಕೆಗಳ ಮೂಲಕ ಎಲ್ಲ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುತ್ತದೆ. ಸ್ವಂತ ವ್ಯಕ್ತಿತ್ವದ ಮೂಲಕ ಜವಾಬ್ದಾರಿಯುತ ನಾಗರಿಕರನ್ನಾಗಿಸುತ್ತದೆ. ಜೊತೆಗೆ ದೇಶ, ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಬದ್ಧರಾಗುವ ಗುಣಗಳನ್ನು ಬೆಳೆಸುವುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ನಂದನ ಬಾಳಗಿ ವಹಿಸಿದ್ದರು.
ವೇದಿಕೆಯ ಮೇಲೆ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ, ತಾಲೂಕಾ ಪಂಚಾಯತಿ ಮಾಜಿ ಅಧ್ಯಕ್ಷೇ ಭವ್ಯಾ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ್ ತಾರೀಕೊಪ್ಪ ಇದ್ದರು.
ಸ್ಕೌಟ್ಸ್ ಗೈಡ್ಸ್ ಪ್ರಧಾನ ಕಾರ್ಯದರ್ಶಿ ಸುಧಾಕರ ನಾಯಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಗಣೇಶ್ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಎರಡು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.